ಹೂವ ತರುವರ ಮನೆಗೆ ಹುಲ್ಲ ತರುವ
ಕೀರ್ತನಕಾರರು : ಪುರಂದರದಾಸರು
ರಾಗ : ಕಾಂಬೋದಿ
ತಾಳ : ಝಂಪೆ
ಹೂವ ತರುವರ ಮನೆಗೆ ಹುಲ್ಲ ತರುವ
ಅವ್ವೆ ಲಕುಮೀರಮಣ ಇವಗಿಲ್ಲ ಗರುವ ||ಪ||
ಒಂದು ದಳ ಶ್ರೀ ತುಳಸಿ ಬಿಂದು ಗಂಗೋದಕವ
ಇಂದಿರಾರಮಣಗರ್ಪಿತವೆನ್ನಲು
ಒಂದೆ ಮನದಲಿ ಸಿಂಧುಶಯನ ಮುಕುಂದಯೆನೆ
ಎಂದೆಂದು ವಾಸಿಪನಾ ಮಂದಿರದೊಳಗೆ ||೧||
ಪರಿಪರಿಯ ಪುಷ್ಪಗಳ ಪರಮಾತ್ಮಗರ್ಪಿಸಿ
ಪರಿಪೂರ್ಣನೆಂದು ಪೂಜೆಯನು ಮಾಡೆ
ಸರಸಿಜಾಕ್ಷನು ತನ್ನ ಸಕಲ ಸ್ವಾತಂತ್ರ್ಯದಲಿ
ಸರಿಭಾಗ ಕೊಡುವ ತನ್ನರಮನೆಯ ಒಳಗೆ ||೨||
ಪಾಂಡವರ ಮನೆಯೊಳಗೆ ಕುದುರೆಗಳ ತಾ ತೊಳೆದು
ಪುಂಡರೀಕಾಕ್ಷ ತಾ ಹುಲ್ಲ ತಂದ
ಅಂಡಜಾಧಿಪ ನಮ್ಮ ಪುರಂದರವಿಠಲನು
ತೊಂಡರಿಗೆ ತೊಂಡನಾಗಿ ಸಂಚರಿಸುತಿಹನು ||೩||
Labels: ಹೂವ ತರುವರ ಮನೆಗೆ, Hoova Taruvara Manege, ಪುರಂದರದಾಸರು, Purandaradasaru
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ